ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನವಾಗಿ ನೇಮಕಗೊಂಡ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರನ್ನು ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸದಸ್ಯ ಆರ್.ವಿ ಮನು ಅವರು ಪರಿಸರ ಸಂಕೇತವಾಗಿರುವ ಹೂವಿನ ಸಸಿ ನೀಡುವ ಮೂಲಕ ಸ್ವಾಗತಿ ಕೋರಿ ಅಭಿನಂದನೆ ಸಲ್ಲಿಸಿದರು.
ನಂತರ ಬೀರಸಂದ್ರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಜೊತೆಗೆ ಆರೋಗ್ಯ ಕಾಳಜಿ ಮುಖ್ಯ, ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಕೈ-ಕಾಲಿಗೆ ಗ್ಲೌಸ್, ರಕ್ಷಣಾತ್ಮಕ ಬಟ್ಟೆ ಧರಿಸುವುದರ ಬಗ್ಗೆ ಅರಿವು ಮೂಡಿಸಬೇಕು.
ಪ್ರತಿ ತಿಂಗಳು ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಹಾಗೂ ಕೆಲಸದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರ ಏರ್ಪಡಿಸಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಯಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ರಜಾದಿನಗಳನ್ನು ನೀಡಬೇಕು. ನಿವೇಶನ, ಮನೆ ಒದಗಿಸಬೇಕು, ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಮ್ಯಾಥೋ ಮುನಿಯಪ್ಪ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.