
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ ಸಂತಸ ಮನೆಮಾಡಿದೆ.
ಗುತ್ತಿಗೆದಾರನ ನಿರ್ಲಕ್ಷ್ಯ ಧೋರಣೆಯಿಂದ ಕಾಮಗಾರಿ ವಿಳಂಬವಾಗಿತ್ತು. ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಸಾರ್ವಜನಿಕರು, ರೈತರು ಹಾಗೂ ವಿದ್ಯಾರ್ಥಿಗಳು ನಿತ್ಯ ಪರದಾಡುತ್ತಿರುವ ಕುರಿತು ಮೇ 12ರಂದು ‘ಪಬ್ಲಿಕ್ ಮಿರ್ಚಿ’ ನ್ಯೂಸ್ ವೆಬ್ ಸೈಟ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಿದ್ದಾರೆ.

2025ರ ಅಕ್ಟೋಬರ್ 24ರಂದು ಕಾಮಗಾರಿಗೆ ಚಾಲನೆ ನೀಡಲಾಗಿದ್ದರೂ ಹಲವು ತಿಂಗಳುಗಳಿಂದ ರಸ್ತೆ ಕಾಮಗಾರಿ ಅಪೂರ್ಣವಾಗಿಯೇ ಉಳಿದಿತ್ತು. ರಸ್ತೆ ಮೇಲೆ ಜಲ್ಲಿಕಲ್ಲು ಹಾಸಿ ಬಿಟ್ಟಿದ್ದರಿಂದ ಧೂಳು ಹೆಚ್ಚಾಗಿ ವಾಹನ ಸವಾರರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಸಾರ್ವಜನಿಕರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ.
ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ–ಹೊಸಹಳ್ಳಿ ಮಾರ್ಗವಾಗಿ ಸಾಗುವ ಈ ರಸ್ತೆ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಿತ್ಯ ಸಂಚಾರಕ್ಕೆ ಜೀವನಾಡಿಯಂತಿದೆ. ಸುಮಾರು 3.5 ಕಿಮೀ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿ ಇದೀಗ ವೇಗ ಪಡೆದುಕೊಂಡಿದ್ದು, ಶೀಘ್ರದಲ್ಲೇ ಗುಣಮಟ್ಟದ ರಸ್ತೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ಡಾಂಬರು ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ‘ಪಬ್ಲಿಕ್ ಮಿರ್ಚಿ’ ನ್ಯೂಸ್ ವೆಬ್ ಸೈಟ್ ಗೆ ಅಭಿನಂದನೆ ಸಲ್ಲಿಸಿ, ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.