ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಳ-ಸಿಎಂ ಸಿದ್ದರಾಮಯ್ಯ

ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದು ಹೇಳಿದರು.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!