ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

*ಆನ್ಲೈನ್ ಮೂಲಕ ಅಹವಾಲು ದಾಖಲಿಸಿ*
ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!