ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು ಗಮನಿಸಿ, ಸರ್ಕಾರ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 10 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಸೋಮವಾರ ರೈತ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ನಡೆಸುವ ರೈತರು ಉತ್ಪಾದನಾ ವೆಚ್ಚ ಹೆಚ್ಚಳದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸಗೊಬ್ಬರಗಳ ಬೆಲೆ ಏರಿಕೆ ಹಾಗೂ ಅಭಾವದ ಪರಿಸ್ಥಿತಿ ರೈತರ ಮೇಲಿನ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಹಾಲಿನ ಪ್ರೋತ್ಸಾಹಧನವನ್ನು 10 ರೂ. ಹೆಚ್ಚಿಸುವಂತೆ ಒತ್ತಾಯಿಸಿ ಜು.9ರಂದು ತಾಲ್ಲೂಕಿನ ರೈತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಿದ್ದಾರೆ. ಈ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲ ಮುಖಂಡರು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೇ.80ಕ್ಕೂ ಹೆಚ್ಚು ಮಹಿಳೆಯರು ಹೈನುಗಾರಿಕೆಯನ್ನು ಅವಲಂಬಿಸಿ ಕುಟುಂಬ ನಿರ್ವಹಿಸುತ್ತಿದ್ದು, ಲಕ್ಷಾಂತರ ರೈತರು ಇದೇ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಾರೆ. ಬರದ ಛಾಯೆ ಕಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಪ್ರಣಾಳಿಕೆಗೆ ಅನುಗುಣವಾಗಿ ಹಾಲಿನ ಪ್ರೋತ್ಸಾಹಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಹಾಲಿನ ಪ್ರೋತ್ಸಾಹಧನ ಹೆಚ್ಚಿಸಿ ರೈತರಿಗೆ ನೆರವಾಗಿದ್ದರು. ಈಗಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತದೃಷ್ಟಿಯಿಂದ ಪ್ರೋತ್ಸಾಹಧನ ಹೆಚ್ಚಿಸಬೇಕು. ಇಲ್ಲವಾದರೆ ರೈತ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ರೈತರು ಹಾಲಿನ ಪೂರೈಕೆಯನ್ನು ನಿರಂತರವಾಗಿ ನಡೆಸಿ ಸರ್ಕಾರ ಹಾಗೂ ಜನರ ಬೆನ್ನಿಗೆ ನಿಂತಿದ್ದರು ಎಂಬುದನ್ನು ಸರ್ಕಾರ ಮರೆಯಬಾರದು ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ, ಹಿಂಡಿ, ಬೂಸ, ಮೇವು ಸೇರಿದಂತೆ ಹಾಲು ಉತ್ಪಾದನೆಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಸು ಸಾಕಿ ಬದುಕುವ ಬದಲು, ಹಸುವನ್ನು ಸಾಕಲು ನಾವು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬರಗಾಲದ ಮುನ್ಸೂಚನೆ ಇರುವುದರಿಂದ ಹೈನುಗಾರ ರೈತರಿಗೆ ಕನಿಷ್ಠ 10 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ಎಂಪಿಸಿಎಸ್ ಸಂಘಗಳ ನೌಕರರ ಸಂಘದ ಅಧ್ಯಕ್ಷ ರವೀಂದ್ರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!