ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿ ಚುಚ್ಚುವುದಿಲ್ಲವೇ?-‌ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ  ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ  ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ ಎಂದು ಹೇಳಿದ್ದಾರೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು? ಎಂದು ಪ್ರಶ್ನಿಸಿದ್ದಾರೆ.

ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ ಎಂದು ಹೇಳಿದ್ದಾರೆ.

ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಸವಾಲ್ ಹಾಕಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

15 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago