ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವಿನ ಸ್ಥಿತಿಗತಿ, ಹವಾಮಾನ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳ ಸಿದ್ಧತೆ ಕುರಿತಂತೆ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಸಿ, ಚರ್ಚಿಸಿದರು. ನಂತರ ಅಧಿಕಾರಿಗಳಿಗೆ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದರು.

ಸೂಚನೆಗಳು ಇಲ್ಲಿವೆ…

• ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.

• ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.

• ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು.

• ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು.

• ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ.

• ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2,410 ಗ್ರಾಮ ಪಂಚಾಯತ್ ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.

• ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ.

• ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ ಗಳಿಗೆ 57 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ.

• ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ.

• ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಾಗುವಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ.

• ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.

• ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.

• ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು.

• ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು.

• ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು.

• ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು

• ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು.

• ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

• ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ಎಂಬ ಮಾಹಿತಿ ಪಡೆಯಬೇಕು. ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು.

• ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು.

– ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ಕುರಿತು ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸಲಹೆ ಸೂಚನೆಗಳನ್ನು ನೀಡಿದರು.

Ramesh Babu

Journalist

Recent Posts

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…

2 minutes ago

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

4 hours ago

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

12 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 day ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

3 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago