ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಅಮಾನತು ಆಗಿದ್ದವರು ಯಾರು?
ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದರು.