ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಮಾಜಿ ಸಚಿವ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಅವರು, ಬಿಬಿಎಂಪಿ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಾಕಿ ಹಣವನ್ನು ಬಿಡುಗಡೆಗೆ ತಡೆ ಹಿಡಿದು ಸಂಕಷ್ಟಕ್ಕೆ ಸಿಲುಕಿಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ನೊಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡು, ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರವನ್ನು ಒತ್ತಾಯಿಸುವಂತೆ ನನಗೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದರು.
ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈ ವಿಚಾರದಲ್ಲಿ ಕುಂಟು ನೆಪ ಹೇಳಿ ವಿನಾಕಾರಣ ವಿಳಂಬ ಧೋರಣೆ ತೋರದೇ ಕೂಡಲೇ ಗುತ್ತಿಗೆದಾರರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಈ ವಿಷಯವಾಗಿ ನಮ್ಮ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಗುತ್ತಿಗೆದಾರರ ಪರವಾಗಿ ಹೋರಾಟ ಮಾಡಲು ಶತಸಿದ್ಧವಾಗಿದೆ ಎಂದೂ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.