
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಮಲ್ಲೇಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತರಾದ ನಾಗಪ್ಪ ಮತ್ತು ರಂಗಪ್ಪ ಅವರು ಕುರಿ, ಮೇಕೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದು ಎರಡನೇ ಬಾರಿ ಇಂತಹ ದಾಳಿ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಿಂದಿನ ಘಟನೆಯ ಬಳಿಕ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಸ್ಥಳೀಯರು ನಲ್ಲೂರು ಗ್ರಾಮ ಪಂಚಾಯಿತಿ ಪಿಡಿಒಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವನ್ನಪ್ಪಿದ ಕುರಿ, ಮೇಕೆಗಳಿಂದ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.