ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು.
ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್ ಅವರು ಮಾತನಾಡಿ, ಪ್ರಧಾನಮಂತ್ರಿಯವರು 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕೆ ಅನುದಾನ ನೀಡಿ, ಉದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ತಂದಿದ್ದಾರೆ. ಯುವಕರು ಕೇವಲ ಡಿಗ್ರಿ ಪಡೆದರೆ ಪ್ರಯೋಜನೆವಿಲ್ಲ, ಕೌಶಲ್ಯ ಭರಿತ ಶಿಕ್ಷಣ ಪಡೆದ್ರೆ ತಕ್ಷಣವೇ ಸಾಕಷ್ಟು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟೀಲ್ ಇಂಡಿಯಾ, ಪಿ.ಎಮ್ ವಿಶ್ವಕರ್ಮ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಲ್ಪಿಸಿಕೊಡುತ್ತಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತಯಾರಿಕಾ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುವಂತೆ ಕ್ರಮ ವಹಿಸಿ, ಯುವಕರಿಗೆ ಉದ್ಯೋಗ ಕೊಡಿಸುವ ಗ್ಯಾರಂಟಿಗೆ ಒತ್ತು ನೀಡುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೇ ಸಾಕಾಗದು, ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕೆನ್ನುವ ಸದುದ್ದೇಶದಿಂದ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಸುಮಾರು 26 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲು 200 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಜಿಲ್ಲೆ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಉದ್ಯಮಿಗಳಿದ್ದು, ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವನ್ನು ನೀಡುತ್ತಾ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದಾರೆ. ರಾಜ್ಯ ಸರ್ಕಾರ ಯುವಕರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲು ಇಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಕೆಲಸ ಮಾಡಿದ್ರೇ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮಾತನಾಡಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ದಲ್ಲಿ 163 ಕಂಪನಿಗಳು ಹಾಗೂ 12 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದವು. 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. 3500 ಅಭ್ಯರ್ಥಿಗಳನ್ನು ಮುಂದಿನ ಸಂದರ್ಶನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ಜಿಲ್ಲಾಧ್ಯಕ್ಷ ರಾಜಣ್ಣ, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ದೊಡ್ಡಬಳ್ಳಾಪುರ ಮಾಜಿ ಶಾಸಕರಾದ ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಅಪರ ಜಿಲ್ಲಾಧಿಕಾರಿ ಸುಮಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ಕಂಪನಿಗಳ ಮುಖ್ಯಸ್ಥರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…