ರಾಜ್ಯಾದ್ಯಂತ ಜುಲೈ 01 ರಿಂದ ಜುಲೈ 07 ರವರೆಗೆ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2023-24 ನೇ ಸಾಲಿನ ಮಳೆಗಾಲದಲ್ಲಿ ಕರ್ನಾಟಕ ರಾಜ್ಯದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮದ ಅನುಷ್ಠಾನಗೊಳಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲದಲ್ಲಿ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸರ್ಕಾರವು ಜುಲೈ 1ರಿಂದ 7ರವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಶಾಲಾ-ಕಾಲೇಜು, ಖಾಸಗಿ ಶಾಲಾ-ಕಾಲೇಜು, ಆರೋಗ್ಯ ಕೇಂದ್ರಗಳು, ಪಶು ಆಸ್ಪತ್ರೆ, ಗೋಶಾಲೆಗಳು, ವಸತಿ ಶಾಲೆಗಳು, ಕೈಗಾರಿಕಾ ಪ್ರದೇಶಗಳು, ರೈತರ ಜಮೀನುಗಳು, ಸರ್ಕಾರಿ ಜಮೀನುಗಳಲ್ಲಿ (ಖರಾಬಿ) ಸಸಿ ನೆಡಲು ಇರುವಂತಹ ಜಾಗಗಳನ್ನು ಗುರ್ತಿಸಿ ಸಂಬಂಧಪಟ್ಟ ಇಲಾಖೆಗಳು, ಅರಣ್ಯ ಇಲಾಖೆಗೆ ವರದಿ ನೀಡಿ ಎಂದು ಹೇಳಿದರಲ್ಲದೇ ಲಭ್ಯವಿರುವ ಸಸಿಗಳ ವಿವರ, ತಯಾರಿ ಸೇರಿದಂತೆ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್.ಆರ್.ಭಟ್, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್‌ಕುಮಾರ್ ಸುಭಾಷ್ ರಾವ್ ಪಾಟೀಲ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.