ಬೆಂಗಳೂರು ಕಮಿಷನರ್ ಕುರ್ಚಿಯಲ್ಲಿ ಹಿತೇಂದ್ರ: ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಸ್ವೀಕಾರ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಸ್ವೀಕರಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಸರ್ಕಾರದ ಆದೇಶ ಹೊರಬಿದ್ದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಹಿತೇಂದ್ರ ಅವರಿಗೆ ಸೀಮಂತ್ ಕುಮಾರ್ ಸಿಂಗ್ ಅವರು ಅಧಿಕಾರ ಹಸ್ತಾಂತರಿಸಿದರು.

ಬೆಂಗಳೂರಿನಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಮಾದರಿ ನಾಯಕತ್ವ ನೀಡಿ, ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಪೊಲೀಸ್ ಇಲಾಖೆಗೆ ಗಣನೀಯ ಕೊಡುಗೆ ನೀಡಿದ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕೃತಜ್ಞತೆ ಸಲ್ಲಿಸಿದೆ. ಅಲ್ಲದೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅವರ ಮುಂದಿನ ಜವಾಬ್ದಾರಿಗೆ ಶುಭ ಹಾರೈಸಿದೆ.

ಇದೇ ವೇಳೆ ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿರುವ ಇಲಾಖೆ, ಅವರ ನಾಯಕತ್ವದಲ್ಲಿ ಸಾರ್ವಜನಿಕ ಸುರಕ್ಷತೆ, ಪರಿಣಾಮಕಾರಿ ಪೊಲೀಸ್ ಸೇವೆ ಹಾಗೂ ನಾಗರಿಕ ಕೇಂದ್ರಿತ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಆದ್ಯತೆ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

error: Content is protected !!