
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 21 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 23 ರ ಮಧ್ಯರಾತ್ರಿ 12 ಗಂಟೆವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಎನ್. ಅನುರಾಧ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ.
ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಮತಗಟ್ಟೆಗಳ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ.
ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಹಾಗೂ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ / ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕಲ್ಲುಗಳನ್ನು, ಖಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ದಹಕ ವಸ್ತುಗಳು ಇತ್ಯಾದಿಗಳನ್ನು ಮತದಾನ ನಡೆಯುವ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ / ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರವಿತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಹುದಾಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ. (ಈ ನಿಷೇಧಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವಸಂಸ್ಕಾರಕ್ಕೆ ಮತ್ತು ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ.)
ನಿಷೇಧಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾರ್ಡಲೆಸ್ ಪೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ /ಸಿಬ್ಬಂದಿಗಳನ್ನು ಹೊರತುಪಡಿಸಿ)
ಬಹಿರಂಗ ಪ್ರಚಾರ ದಿನಾಂಕ 21.10.2026 ರಂದು ಸಂಜೆ 6-00 ಗಂಟೆಗೆ ಕೊನೆಗೊಳ್ಳಲಿದ್ದು, (ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಜಿಲ್ಲೆಯ ಮತದಾರರಲ್ಲದವರು ಜಿಲ್ಲಾ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು). ಮತದಾನ ದಿನದಂದು ಪತ್ರಿಕಾ ಮಾದ್ಯಮದವರು ಮತದಾನದ ಗೌಪ್ಯತೆಗೆ ದಕ್ಕೆ ಬರುವಂತ ಛಾಯಚಿತ್ರ ತೆಗೆಯುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಸಂದರ್ಭದಲ್ಲಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
*ಮದ್ಯ ಮಾರಾಟ, ಸಂಗ್ರಹ ನಿಷೇಧ*
ಚುನಾವಣೆಯು ಶಾಂತಿಯುತವಾಗಿ ಮತ್ತು ಮುಕ್ತವಾಗಿ ನಡೆಯುವ ಸಲುವಾಗಿ ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯಲ್ಲಿ ಅಂದರೆ ಅಕ್ಟೋಬರ್ 21ರಂದು ಮಧ್ಯಾಹ್ನ 4-00 ಗಂಟೆಯಿಂದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿರುವಂತೆ ಬೆಂಗಳೂರು ಗ್ರಾಮಾಂತರ ಜಲ್ಲೆಯಾದ್ಯಂತ ಮದ್ಯಮಾರಾಟ, ಹಂಚಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮತ್ತು ಕೆಎಸ್ ಬಿಸಿಎಲ್ ಡಿಪೋಗಳನ್ನು ಮುಚ್ಚಲು ಆದೇಶಿಸಿ ಶುಷ್ಕ ದಿನ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.