
ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್ಡಿಎ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಕೆಸ್ತೂರು ರಮೇಶ್ ತಿಳಿಸಿದರು.
ಎನ್ಡಿಎ ಅಭ್ಯರ್ಥಿ ಪರವಾಗಿ ಶಿಕ್ಷಕ ಮತದಾರರನ್ನು ಹಲವು ಬಾರಿ ನೇರವಾಗಿ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಲಾಗಿದೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನೂ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕ ಮತದಾರರು ಎ.ಪಿ. ರಂಗನಾಥ್ ಅವರಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಎಲ್ಲ ಕ್ಷೇತ್ರಗಳಿಗಿಂತ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಗೆ ಅತಿ ಹೆಚ್ಚು ಬಹುಮತ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಿದ್ದಾರೆ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ರಂಗನಾಥ್ ಅವರಿಗೆ ಹೆಚ್ಚಿನ ಮತಗಳು ಲಭಿಸಲಿವೆ ಎಂಬ ನಿರೀಕ್ಷೆಯಿದೆ ಎಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮತದಾನ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ತೀವ್ರಗೊಂಡಿದೆ.