ಬೆಂ.ಗ್ರಾ: ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು- ಡಿ.21 ರಿಂದ 24 ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಆಯ್ದ ಶಾಲಾ, ಅಂಗನವಾಡಿ ಕೇಂದ್ರಗಳಲ್ಲಿ ಪೊಲಿಯೋ ಬೂತ್ ತೆರೆಯಲಾಗುವುದು.

ಜೊತೆಗೆ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ರಸ್ತೆ ಟೋಲ್‌ ಗೇಟ್‌ಗಳಲ್ಲಿ ಪೊಲಿಯೋ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದರು.

ಪೊಲಿಯೋ ಲಸಿಕೆ ಹಾಕಲು ಜಿಲ್ಲೆಯಲ್ಲಿ ಅವಶ್ಯಕತೆ ಇರುವಷ್ಟು ಪೋಲಿಯೋ ಬೂತ್ ತೆರೆಯಬೇಕು, ಲಸಿಕೆ ಹಾಕುವವರಿಗೆ ಸೂಕ್ತ ತರಬೇತಿ ನೀಡಿ, ಟಾರ್ಗೆಟ್ ಫಿಕ್ಸ್ ಮಾಡಿ. ಲಸಿಕೆ ವಂಚಿತ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ಹಾಕಬೇಕು, ವಲಸೆ ಕಾರ್ಮಿಕರ ಮಕ್ಕಳಿಗೂ ಕೂಡ ಲಸಿಕೆ ಹಾಕಿಸಬೇಕು. ಒಟ್ಟಾರೆಯಾಗಿ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದೆ ನೋಡಿಕೊಂಡು ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

*ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು*

ಕಳೆದ ಏಪ್ರಿಲ್ ನಿಂದ ನವೆಂಬರ್ ವರೆಗೆ 0-1 ವರ್ಷ ದೊಳಗಿನ 18 ಶಿಶುಗಳು ಸಾವನ್ನಪ್ಪಿದ್ದು ಹೊಸಕೋಟೆ 07, ದೇವನಹಳ್ಳಿ 02, ದೊಡ್ಡಬಳ್ಳಾಪುರ 05 ಹಾಗೂ ನೆಲಮಂಗಲ 04 ಶಿಶುಗಳು ಸಾವನ್ನಪ್ಪಿವೆ. ಜೊತೆಗೆ 1-5 ವರ್ಷದೊಳಗಿನ 4 ಮಕ್ಕಳು ಹಾಗೂ ಮೂವರು ಗರ್ಭಿಣಿಯರು ಕಳೆದ ಎಂಟು ತಿಂಗಳಲ್ಲಿ ಸಾವನ್ನಪ್ಪಿದ್ದಾರೆ.

ಜಿಲ್ಲಾಧಿಕಾರಿಗಳು ತಾಯಿ ಮತ್ತು ಶಿಶು ಮರಣ ಪರೀಶೀಲನೆ ಸಭೆ ನಡೆಸಿ ಶಿಶು,ಮಕ್ಕಳು ಮತ್ತು ಗರ್ಭಿಣಿಯರ ಹಾರೈಕೆ, ಆರೋಗ್ಯ ಸಂರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರು, ನರ್ಸ್ ಗಳು, ವೈದ್ಯರ ಪಾತ್ರ ಬಹಳ ಮುಖ್ಯ. ಜಿಲ್ಲೆಯಲ್ಲಿ ಮಕ್ಕಳ, ಗರ್ಭಿಣಿಯರ ಸಾವು ತಪ್ಪಿಸುವುದು ನಿಮ್ಮ ಕೈಯಲ್ಲಿರುತ್ತದೆ. ಮಕ್ಕಳ ಹಾರೈಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದರು.

ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು, ಅವಶ್ಯಕತೆ ಇದ್ದಲ್ಲಿ ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ಆರಂಭಿಸಬೇಕು. ಆಶಾ ಕಾರ್ಯಕರ್ತೆಯರು ಮಗು, ತಾಯಿಯ ಆರೋಗ್ಯದ ಬಗ್ಗೆ ನಿಗಾ ವಹಿಸಿ ಕಾಲ ಕಾಲಕ್ಕೆ ಲಸಿಕೆ ಪಡೆಯುತ್ತಿದ್ದಾರೆ ಇಲ್ಲವೇ, ಆರೋಗ್ಯದ ಬಗ್ಗೆ ವಿಚಾರಿಸಬೇಕು. ಆಸ್ಪತ್ರೆಗಳಲ್ಲಿ ಸೂಕ್ತ ಸಮಯಕ್ಕೆ ವೈದ್ಯರು ಇಲ್ಲದಿರುವುದು, ಚಿಕಿತ್ಸೆ ಸಿಗದಿರುವುದು, ಮಾಹಿತಿ-ಅನುಭವದ ಕೊರತೆ, ನಿರ್ಲಕ್ಷ್ಯದಿಂದ ಈ ರೀತಿ ಮಕ್ಕಳ-ಗರ್ಭಿಣಿಯರ ಸಾವು ಸಂಭವಿಸುತ್ತದೆ. ಹೀಗೆ ಮುಂದುವರೆದರೆ ಘಟನೆಗೆ ಕಾರಣರಾಗುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

3 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

4 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

6 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

10 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

10 hours ago