ಬೆಂ.ಗ್ರಾ.ಜಿಲ್ಲೆ: ಮಸ್ಟರಿಂಗ್ ಕಾರ್ಯ ಸುಗಮ, ಮೇ.10ರಂದು ಮತದಾನ

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ಮತಯಂತ್ರಗಳು ಹಾಗೂ ಚುನಾವಣಾ ಸಾಮಾಗ್ರಿಗಳನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯವು ಇಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ, 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೊಸಕೋಟೆ ಟೌನ್‌ನ ಎಂವಿ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದೇವನಹಳ್ಳಿ ಟೌನ್‌ನ ಬಿಬಿ ರಸ್ತೆಯ, ಹೊಸ ಬಸ್ ನಿಲ್ದಾಣದ ಎದುರಿನ ಸರ್ಕಾರಿ ಪದವಿ ಪೂರ್ವ ಕಾಲೇಜು, 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನೆಲಮಂಗಲ ಟೌನ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಲ್ಲಿ ನಡೆಯಿತು.

ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಮತಗಟ್ಟೆ ಬಂದೋಬಸ್ತ್‌ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಹಾಗೂ ಗೃಹ ರಕ್ಷಕದಳದ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಆಯಾ ಮಸ್ಟರಿಂಗ್ ಕೇಂದ್ರಗಳ ಆವರಣದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಚುನಾವಣಾ ಪ್ರಕ್ರಿಯೆಗೆ ನೇಮಿಸಲಾದ ಅಧಿಕಾರಿಗಳು, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ, ಬಸ್‍ಗಳ ವಿವರವನ್ನು ತಿಳಿಸಲು ಹಾಗೂ ಚುನಾವಣಾ ಸಾಮಾಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆಯನ್ನು ವಿತರಿಸಲು ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆ ಮೂಲಕ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಾಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ನಡೆಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾಗಿ ವ್ಯವಸ್ಥೆ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಮತದಾನ ದಿನದಂದು(ಮೇ 10) ಮತಗಟ್ಟೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿ ಇಂದು ಬೆಳಗ್ಗೆ ಮಸ್ಟರಿಂಗ್ ಕೇಂದ್ರಗಳಿಗೆ ಹಾಜರಾಗಿದ್ದರು. ನಂತರ ಮತಗಟ್ಟೆಗಳಿಗೆ ತೆರಳಲು ಕಲ್ಪಿಸಲಾಗಿದ್ದ ಬಸ್‌ಗಳಲ್ಲಿ ಚುನಾವಣಾ ಸಾಮಾಗ್ರಿಗಳೊಂದಿಗೆ ಸಂಬಂಧಿಸಿದ ಮತಗಟ್ಟೆಗಳಿಗೆ ಸಂಜೆ 4.00ಗಂಟೆಯ ವೇಳೆಗೆ ತೆರಳಿದರು ಎಂದು ತಿಳಿಸಿದರು.

ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದೇವನಹಳ್ಳಿ ಟೌನ್‌ನ ಬಿಬಿ ರಸ್ತೆಯ, ಹೊಸ ಬಸ್ ನಿಲ್ದಾಣದ ಎದುರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಹಾಗೂ 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಅಧಿಕಾರಿಗಳು, ಸಿಬ್ಬಂದಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಆಯಾ ವಿಧಾನಸಭಾ ಕ್ಷೇತ್ರದ ಚುನಾವಣೆ ನಿಯೋಜಿತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿಯ ಮತದಾರರ ಅಂಕಿಅಂಶ

ಜಿಲ್ಲೆಯಲ್ಲಿ 4,35,835 ಪುರುಷ ಮತದಾರರು, 4,41,907 ಮಹಿಳಾ ಮತದಾರರು ಹಾಗೂ 148 ಇತರೆ ಮತದಾರರು ಸೇರಿದಂತೆ ಒಟ್ಟು 8,77,890 ಮತದಾರರು ಇದ್ದಾರೆ.

ಚುನಾವಣಾ ಕಣದಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಅಂಕಿಅಂಶ

ಚುನಾವಣೆಯ ಅಂತಿಮ ಕಣದಲ್ಲಿ 50 ಪುರುಷರು ಹಾಗೂ 06 ಮಹಿಳೆಯರು ಸೇರಿದಂತೆ ಒಟ್ಟು 56 ಅಭ್ಯರ್ಥಿಗಳಿದ್ದು, ಚುನಾವಣೆ ಎದುರಿಸಲಿದ್ದಾರೆ.

ಜಿಲ್ಲೆಯ ಮತಗಟ್ಟೆಗಳ ವಿವರ

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟಾರೆ 1137 ಮತಗಟ್ಟೆಗಳಿವೆ. ನಗರ ಪ್ರದೇಶದಲ್ಲಿ 879 ಹಾಗೂ ಗ್ರಾಮೀಣ ಪ್ರದೇಶದಲ್ಲಿ 258 ಮತಗಟ್ಟೆಗಳಿವೆ.

ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿ ಅಂಕಿಅಂಶ

ಜಿಲ್ಲೆಯ 1137 ಮತಗಟ್ಟೆಗಳಿಗೆ 1470 ಪಿಆರ್‌ಓ, 1499 ಎಪಿಆರ್‌ಓ, 2929 ಪಿಓ ಹಾಗೂ 285 ಮೈಕ್ರೋ ಅಬ್ಸವರ್ಸ್‌ಗಳನ್ನು ನೇಮಿಸಲಾಗಿದೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

53 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago