ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಬಂಧಪಟ್ಟ ಇಂಜಿನಿಯರ್‌ ಅವರನ್ನು ಅಮಾನತುಗೊಳಿಸಿ, ನೋಟಿಸ್‌ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಏ.29ರಂದು ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳ ಸಭೆಯಲ್ಲಿ ಅವರು ಭಾಗವಹಿಸಿ ಅವರು ಮಾತನಾಡಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು.

ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು ಎಂದರು.

ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಜಿಬಿಎ ಆಯುಕ್ತರಾದ ಮಹೇಶ್ವರ ರಾವ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್‌ರವರು ಸೇರಿದಂತೆ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!