ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿಂದು ಬಿರುಸಿನಿಂದ ನಡೆದ ಶಾಸಕಾಂಗ ಪಕ್ಷದ ಸಭೆ.
ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರ ಪರಿಹಾರವಾದ ಬೆನ್ನಲ್ಲೇ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಶಾಸಕರೆಲ್ಲರೂ ಸಹಮತ ಸೂಚಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂದೆ, ಜೀತೇಂದ್ರ ಸಿಂಗ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ ಹಾಗೂ ನಿಯೋಜಿತ ಸಿಎಂ ಸಿದ್ದರಾಮಯ್ಯ, ನಿಯೋಜಿತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಶಾಸಕರು ಭಾಗವಹಿಸಿದ್ದರು.