ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ- ಮೋದಿ ಸರ್ಕಾರ ವಿರುದ್ಧ ಸಿಎಂ ಸಿದ್ದರಾಮಯ್ಯ‌‌ ಕಿಡಿ

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದರು.

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *