ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆ ಸಹಕಾರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವುದರಿಂದ ಕುಟುಂಬದ ಜೀವನ ಪರಿಸ್ಥಿತಿ ಸುಧಾರಿಸಲು ಸಹಕಾರಿ, ಮಹಿಳೆಯರನ್ನು ಸಶಕ್ತರನ್ನಾಗಿಸಿ ಸ್ವಾವಲಂಬನೆಯ ಬದುಕು ಸಾಗಿಸಲು, ಅರ್ಥಿಕವಾಗಿ ಸಬಲರಾಗಲು ಈ ಯೋಜನೆ ಉಪಯೋಗವಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಏಕ ಕಾಲಕ್ಕೆ ಚಾಲನೆಗೊಂಡ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಫಲಾನುಭವಿಗಳು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಉಪಾಧ್ಯಕ್ಷೆ ಗೀತಾ ಶ್ರೀಧರ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಅಧಿಕಾರಿಗಳಾದ ಅನಿತಾ ಲಕ್ಷ್ಮಿ, ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕಿ ಶಾಲಿನಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಸಿ. ರೂಪಾ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಗೃಹಲಕ್ಷ್ಮಿ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *