
ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಉದ್ಘಾಟನೆ ಆಗಿದೆ. ಆದರೆ ಇದುವರೆಗೂ ಬೀಗ ತೆಗೆದಿಲ್ಲ, ಅಧಿಕಾರಿಗಳು ಕಚೇರಿಗೆ ಬಂದಿರುವುದಿಲ್ಲ. ಕೂಡಲೇ ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೊಡ್ಡಬಳ್ಳಾಪುರ ಟೌನ್ ನ ಮುತ್ತೂರಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಪಟಾಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲಿ, ಜೊತೆಗೆ ತಪ್ಪಿತಸ್ಥರ ವಿರುದ್ಧವಾಗಿ ಯಾವುದೇ ಕಾನೂನು ಕ್ರಮ ಆಗಿಲ್ಲ ಎಂದು ಪ್ರಸ್ತಾಪಿಸಿದರು, ಇದಕ್ಕೆ ಎಸ್ಪಿ ಅವರು ಪ್ರತಿಕ್ರಿಯಿಸಿ ಖುದ್ದಾಗಿ ಪ್ರಕರಣದ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಹೆಗಡೆ, ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧಾ, ಎಸ್ಪಿ ಚಂದ್ರಕಾಂತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.