ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿಯು ಜನವರಿ 26, 2029ರವರೆಗೆ ಇರಲಿದೆ.
ಕುಮಾರ್ ಅವರು 1988ನೆಯ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಕುಮಾರ್ ಅವರು ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಕೇರಳ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಯಾಗಿಯೂ ಅವರು ಕೆಲಸ ನಿರ್ವಹಿಸಿದ್ದಾರೆ.
ರಕ್ಷಣಾ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ, ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಕಾರ್ಯದರ್ಶಿಯಾಗಿ, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ, ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ಅವರು ಕೆಲಸ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯದಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುಮಾರ್, ಮಾರ್ಚ್ 15, 2024 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.
1989ರ ಹರಿಯಾಣ ಕೇಡರ್‌ನ ಐಎಎಸ್ ಅಧಿಕಾರಿ ವಿವೇಕ್ ಜೋಷಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಇ.ಸಿ) ನೇಮಿಸಲಾಗಿದೆ.