ಇಟಲಿಯಲ್ಲಿ ಜಿ7 ದೇಶಗಳ ಶೃಂಗಸಭೆಯಲ್ಲಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸ ಕೈಗೊಂಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ವಿದೇಶಿ ಪ್ರವಾಸ ಇದಾಗಿದೆ.
2 ದಿನಗಳ ಶೃಂಗದ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಸೇರಿದಂತೆ ಇತರೆ ರಾಷ್ಟ್ರಗಳ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಭಾರತ ಜಿ7ನ ಭಾಗವಾಗದೇ ಇದ್ದರೂ, ಜಾಗತಿಕ ಮಟ್ಟದಲ್ಲಿ ಭಾರತದ ಪಾತ್ರವನ್ನು ಗಮನಿಸಿ ಇಟಲಿ ಪ್ರದಾನಿ ಮೆಲೋನಿ, ಪ್ರಧಾನಿ ಮೋದಿ ಅವರಿಗೆ ವಿಶೇಷ ಆಹ್ವಾನ ನೀಡಿದ್ದಾರೆ.
ವಿಶ್ವ ನಾಯಕರೊಂದಿಗೆ ಉತ್ಪಾದಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ. ಒಟ್ಟಾಗಿ, ನಾವು ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬೆಳೆಸುವ ಗುರಿಯನ್ನು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.