ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಲಭಿಸಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಎದ್ದು ಕಾಣುತ್ತಿದೆ.‌ಸಿಎಂ ಸಿದ್ದರಾಮಯ್ಯ ಈ‌ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.

ಏನಿದು ಪ್ರಕರಣ?: ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ  ಉಳಿಸಲಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *