ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಸೊಮವಾರ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ದೇವಾಲಯಕ್ಕೆ ಆಗಮಿಸಿದ ಸುಧಾಕರ್ ಅವರು, ಬಿಜೆಪಿ-ಜೆಡಿಎಸ್ ಮುಖಂಡರ ಜೊತೆಗೂಡಿ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಎರಡು ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಪಕ್ಷವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷವನ್ನ ವಿರೋಧಿಸುತ್ತಲೇ ಬಂದಿದೆ. ಡಾ.ಕೆ.ಸುಧಾಕರ್ ಅವರು ಆರೋಗ್ಯ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ಎಂಪಿ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆದು ಜಯಗಳಿಸಲಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಸುಧಾಕರ್ ಅವರ ಬೆಂಬಲಕ್ಕೆ ನಿಲ್ಲುತ್ತಾರೆ ಎಂದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಕೆ.ಎಂ.ಹನುಮಂತರಾಯಪ್ಪ, ಹರೀಶ್ ಗೌಡ ಸೇರಿದಂತೆ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.