ರಾಜಸ್ಥಾನದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಚಿಸಲು ಕಸರತ್ತು: ‘ಕೈ’ ಒಗ್ಗಟ್ಟಿನ ಮಂತ್ರ: ಅಶೋಕ್ ಗೆಹ್ಲೋಟ್ ಹಾಗೂ ಸಚಿನ್‌ ಪೈಲಟ್ ನಡುವಿನ ಭಿನ್ನಾಭಿಪ್ರಾಯಕ್ಕೆ ತೇಪೆ ಹಚ್ಚಿದ ಹೈಕಮಾಂಡ್..!

ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಹಾಗೂ ಪಕ್ಷದ ನಾಯಕ ಸಚಿನ್‌ ಪೈಲಟ್‌ ನಡುವಿನ ಭಿನ್ನಾಭಿಪ್ರಾಯಕ್ಕೆ ತೇಪೆ ಹಚ್ಚಿರುವ ಕಾಂಗ್ರೆಸ್‌ ಹೈಕಮಾಂಡ್‌, ವಿಧಾನಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುವುದಾಗಿ ಹೇಳಿಕೊಂಡಿದೆ.

ನವೆಂಬರ್‌ ತಿಂಗಳಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣಾ ತಂತ್ರಗಾರಿಕೆಯ ಸಭೆಯಲ್ಲಿ ನಾಯಕರು ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣಗಳ ತನಿಖೆ ಕುರಿತ ತಮ್ಮ ಬೇಡಿಕೆ ಈಡೇರಿಸಲು ಹೈಕಮಾಂಡ್‌ ಕ್ರಮ ಕೈಗೊಂಡಿದೆ ಎಂದು ಸಚಿನ್‌ ಪೈಲಟ್‌ ತೃಪ್ತಿ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಪಕ್ಷ ಭಾರಿ ಗೆಲುವು ಸಾಧಿಸಲು ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದೂ ಹೇಳಿದರು. ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ರಾಜಸ್ಥಾನ ರಾಜ್ಯ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ರಾಜ್ಯ ನಾಯಕತ್ವದ ವಿರುದ್ಧ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಒಂದು ವೇಳೆ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ರಾಷ್ಟ್ರೀಯ ನಾಯಕರು ಎಚ್ಚರಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌, ‘ಸೆಪ್ಟೆಂಬರ್‌ ಮೊದಲ ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಗೆಲುವೇ ಮಾನದಂಡವಾಗಿರಲಿದೆ’ ಎಂದರು. ‘ರಾಜ್ಯದಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಚುನಾವಣೆಗೆ ಮುನ್ನ ಸಾಮಾನ್ಯವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸುವುದಿಲ್ಲ. ಆದರೆ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ’ ಎಂದರು.

‘ಮುಖ್ಯಮಂತ್ರಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ 29 ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ಒಗ್ಗೂಡಿ ಪಕ್ಷವನ್ನು ಅಧಿಕಾರಕ್ಕೆ ತರುವ ವಾಗ್ದಾನ ಮಾಡಿದ್ದಾರೆ’ ಎಂದರು.

ಗೆಹ್ಲೋಟ್ ಮತ್ತು ಸಚಿನ್‌ ನಡುವೆ ಸಂಧಾನ ಸೂತ್ರ ಏರ್ಪಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ವೇಣುಗೋಪಾಲ್‌ ನಿರಾಕರಿಸಿದರು. ಕಾಲ್ಬೆರಳುಗಳ ಮೂಳೆ ಮುರಿತದಿಂದ ಚೇತರಿಸಿಕೊಳ್ಳುತ್ತಿರುವ ಗೆಹ್ಲೋಟ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!