ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು.
ಆಂಧ್ರಪ್ರದೇಶದ ಅರಣ್ಯ ಸಚಿವರಾದ ಪವನ್ ಕಲ್ಯಾಣ್ ಅವರು ಆಂಧ್ರ ಸರ್ಕಾರದ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ – ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಚಿವರುಗಳಾದ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.