ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಪ್ರಶ್ನಿಸಿದ್ದರು ಎಂದು ತಿಳಿದ್ದಾರೆ.
2008ರಲ್ಲಿ ವಡೋದರಾದ ಸಮಾರಂಭದಲ್ಲಿ ಮಾತನಾಡುತ್ತಾ ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು ಎಂದು ಹೇಳಿದ್ದಾರೆ.
ಹದಿನಾಲ್ಕನೇ ಹಣಕಾಸು ಆಯೋಗದ ಜೊತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಮೋದಿಯವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 32 ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು ಎಂದು ಹೇಳಿದ್ದಾರೆ.
‘’ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ದಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ದಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್ ಡಿ ಐ ನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು ಎಂದು ತಿಳಿಸಿದ್ದಾರೆ.
ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ ಎಂದಿದ್ದಾರೆ.
2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿಯವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…