ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಯನ್ನ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಲಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸುವಲ್ಲಿ ಸೋತಿದೆ. ಗ್ಯಾರೆಂಟಿ ಎಂಬ ಅಸ್ತ್ರ ಬಳಸಿ ಚುನಾವಣೆ ಗೆದ್ದ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
ತಾಲ್ಲೂಕಿಗೆ ಮಂಜೂರಾಗಿರುವ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣ ವಿಳಂಬವಾಗಿದೆ. ತಾಲ್ಲೂಕಿನಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದೇವೆ. ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಸರ್ಕಾರದ ದುರಾಡಳಿತ ಖಂಡಿಸಿ ಬೆಳಿಗ್ಗೆ 10 ಕ್ಕೆ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.
ನಂತರ ಜಿಲ್ಲಾ ವಕ್ತರರಾದ ಪುಷ್ಪ ಶಿವಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು, ಸರಿಪಡಿಸುವಲ್ಲಿ ನಮ್ಮೆಲ್ಲರ ಭಾಗವಹಿಸುವಿಕೆಯ ಅವಶ್ಯಕತೆ ಇದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಮಾ ಮಹೇಶ್ವರಿ , ನಗರಸಭಾ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮಿ ನಾರಾಯಣ , ಸದಸ್ಯರಾದ ನಾಗರತ್ನಮ್ಮ , ವತ್ಸಲಾ, ಪ್ರಧಾನ ಕಾರ್ಯದರ್ಶಿ ಗೋಪಿ, ಮುಖಂಡರಾದ ಜಗನ್ನಾಥ್, ಲಕ್ಷ್ಮಿ ನಾರಾಯಣ್, ಮತ್ತಿತರರು ಉಪಸ್ಥಿತರಿದ್ದರು.