ಕೋಲಾರ: ರೈತರ ಬೇಡಿಕೆಗಳ ಈಡೇರಿಕೆಗಾಗಿ ಸಂಸತ್ತಿನಲ್ಲಿ ವಿಶೇಷ ಮಸೂದೆಯನ್ನು ಮಂಡಿಸುವಂತೆ ಸಂಸದ ಎಂ.ಮಲ್ಲೇಶ್ ಬಾಬು ಅವರಿಗೆ ಅವರ ನಿವಾಸದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗವು ಭೇಟಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ದೇಶದ ರಾಜಧಾನಿ ದೆಹಲಿಯಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಮತ್ತು ಎಂಎಸ್‌ಪಿ ದರದಲ್ಲಿ ಬೆಳೆಗಳ ಖರೀದಿಗೆ ಖಾತರಿ ಕಾನೂನನ್ನು ಜಾರಿಗೆ ತರಲು ಐತಿಹಾಸಿಕ ಚಳವಳಿ ನಡೆಸಿದ ಪರಿಣಾಮ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಎಂಎಸ್‌ಪಿ ಗ್ಯಾರಂಟಿ ಕಾನೂನು ಮಾಡಲು ಸಮಿತಿ ರಚನೆ ಮಾಡುವುದಾಗಿ ಘೋಷಿಸಿತ್ತು. ಆದರೆ ಇದುವರೆಗೆ ಕಾನೂನು ರೂಪಿಸದ ಕೇಂದ್ರ ಸರ್ಕಾರ ವಿಳಂಬ ನೀತಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಸಚಿವರ ಜತೆ ನಾಲ್ಕು ಸುತ್ತಿನ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸಲು ಹೊರಟಿದ್ದ ರೈತರ ಮೇಲೆ ಹರಿಯಾಣದ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ನಡೆಸಿದ ಹಿಂಸಾಚಾರದಲ್ಲಿ ರೈತ ಶುಭಾಕರನ್ ಸಿಂಗ್ ಹುತಾತ್ಮರಾದರು. ಐವರು ರೈತರು ದೃಷ್ಟಿ ಕಳೆದುಕೊಂಡು 433 ರೈತರು ಗಾಯಗೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ಲೋಕಸಭೆ ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಆಶ್ವಾಸನೆ ನೀಡಿದ್ದರು ಆದ್ದರಿಂದ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸುವುದು ಜವಾಬ್ದಾರಿ ಎಂಬುದನ್ನು ಅರಿಯಬೇಕು. ಹಾಗೊಮ್ಮೆ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸದಿದ್ದರೆ ರೈತರ ಉಳಿವು ಕಷ್ಟವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಮ್ಮ ಕೋಲಾರ ರೈತ ಸಂಘದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆಗಳನ್ನು ನಿಗದಿಪಡಿಸಬೇಕು. ರೈತರು ಮತ್ತು ಕೂಲಿಕಾರರನ್ನು ಸಂಪೂರ್ಣ ಸಾಲದಿಂದ ಮುಕ್ತಗೊಳಿಸಬೇಕು ಭಾರತವು ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯಿಂದ ಹೊರಬರಬೇಕು. ಎಲ್ಲ ಮುಕ್ತ ವ್ಯಾಪಾರ ಒಪ್ಪಂದಗಳನ್ನು ನಿಷೇಧಿಸಬೇಕು. 60 ವರ್ಷ ತುಂಬಿದ ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಫಸಲ್ ಬಿಮಾ ಬೆಳೆ ವಿಮಾ ಯೋಜನೆಯಲ್ಲಿ ತಿದ್ದುಪಡಿಗಳನ್ನು ಮಾಡಬೇಕು. ನಕಲಿ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೊಬ್ಬರಗಳನ್ನು ತಯಾರಿಸುವ ಕಂಪನಿಗಳಿಗೆ ಕಠಿಣ ಶಿಕ್ಷೆ ಮತ್ತು ದಂಡವನ್ನು ವಿಧಿಸಲು ನಿಬಂಧನೆಗಳನ್ನು ಮಾಡಬೇಕು. ಬೀಜಗಳ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ರಾಜ್ಯದಲ್ಲಿ ಬರ, ಅತಿವೃಷ್ಟಿ, ಮಳೆ ಹಾನಿ, ಪ್ರಕೃತಿ ವಿಕೋಪ ಪರಿಹಾರ, ಎನ್‌ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಬೇಕು. ವೈಜ್ಞಾನಿಕವಾಗಿ ಪರಿಹಾರ ನಿಗದಿ ಮಾಡುವಂತಾಗಬೇಕು. ಹರಿಯಾಣದಲ್ಲಿ ರೈತರ ಆಂದೋಲನ-2 ರ ವೇಳೆ ಗುಂಡು ಹಾರಿಸಿ ರೈತರಿಗೆ ಚಿತ್ರಹಿಂಸೆ ನೀಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೆ ಪಿ ಆರ್ ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್, ಕುಮಾರ್ ಮುಖಂಡರಾದ ಶಿವರಾಜ್ ,ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆನಂದ್ ಕುಮಾರ್, ಚಿನ್ನಾಪುರ ಮಂಜುನಾಥ್, ಮುನಿವೆಂಕಟಪ್ಪ, ಗೋಪಾಲ್, ನಮ್ಮ ಕೋಲಾರ ರೈತ ಸಂಘದ , ರವಿ, ಕೃಷ್ಣೇಗೌಡ, ಸಿಐಟಿಯು ಮುಖಂಡರಾದ ಹೆಚ್.ಬಿ.ಕೃಷ್ಣಪ್ಪ, ಎಂ.ಭೀಮರಾಜ್ ಮುಂತಾದವರು ಇದ್ದರು.