ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದೆ.
ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆ 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.
ಜನಪ್ರತಿನಿಧಿ ಕಾಯ್ದೆಯ ನಿಯಮದಂತೆ ರಾಹುಲ್ ಗಾಂಧಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಶಿಕ್ಷೆಯ ದಿನಾಂಕವಾದ ಮಾರ್ಚ್ 23, 2023ರಿಂದ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8ರಲ್ಲಿನ ಭಾರತೀಯ ಸಂವಿಧಾನದ 102 (1)(e) ವಿಧಿಯ ನಿಯಮಗಳ ಅಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಲೋಕಸಭೆ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.