ವಕ್ಫ್ ವಿವಾದವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ: ವಕ್ಫ್ ಬೋರ್ಡ್‌ ನಿಂದ ರೈತರ ಭೂಮಿಯ ರಕ್ಷಣೆ ಹಾಗೂ ಸಚಿವ ಜಮೀರ್ ಅಹ್ಮದ್ ರನ್ನ ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹ

ವಕ್ಫ್ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ವಿರೋಧಪಕ್ಷ ಬಿಜೆಪಿ, ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ.

ವಕ್ಫ್ ಬೋರ್ಡ್‌ ನಿಂದ ರೈತರ ಭೂಮಿಯ ರಕ್ಷಣೆ ಮತ್ತು ಕರ್ನಾಟಕ ಸರ್ಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಲಾಯಿತು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ‌ ಘಟಕದ ರಾಮಕೃಷ್ಣಪ್ಪ, ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ. ಒಂದು ಕೋಮಿನ ಓಲೈಕೆಗಾಗಿ ರಾಜ್ಯದ ರೈತರ ಸಮುದಾಯವನ್ನು ನಾಶ ಮಾಡಲು ಹೊರಟಿರುವ ಸಚಿವ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡವನ್ನು ಹೇರುತ್ತಿದ್ದಾರೆ. ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ. ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಇನ್ನೂ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಧುಮುಕಿದ್ದೇವೆ ಎಂದರು.

ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ಈ ಕೂಡಲೇ ಹಿಂಪಡೆಯಬೇಕು. ಯಾವುದೇ ರೈತರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಅವಕಾಶ ನೀಡುವುದಿಲ್ಲವೆಂದು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದಲ್ಲಿಯೂ ನೋಟಿಸ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರದಲ್ಲಿ ವಕ್ಫ್ ಸಚಿವರು ಅಧಿಕೃತ ಆದೇಶ ಮಾಡಿರಲಿಲ್ಲ. ಈಗಿನ ವಕ್ಫ್ ಸಚಿವರ ಒತ್ತಡದಿಂದಾಗಿ ಪಹಣಿ ಇಂಡೀಕರಣ ಆಗಿ ವಕ್ಫ್ ಆಸ್ತಿ ಎಂದು ಬೆದರಿಸುವ ಕೆಲಸ ನಡೆದಿದೆ. ಈ ನಿಟ್ಟಿನಲ್ಲಿ 1974ರಲ್ಲಿ ಜಾರಿಗೆ ತಂದಿರುವ ಈ ವಕ್ಫ್ ಆಸ್ತಿ ವಿವಾದ ಗೆಜೆಟ್ ಅಧಿಸೂಚನೆ ರದ್ದು ಮಾಡಬೇಕು. ರೈತರ ಹೆಸರಿಗೆ ಮತ್ತೆ ಪಹಣಿ ಮಾಡಬೇಕು ಎಂದು ಆಗ್ರಹಿಸಿ ಹೋರಾಟ ರೂಪಿಸಲಾಗಿದೆ. ವಕ್ಫ್ ಆಸ್ತಿ ಸಮಗ್ರ ತನಿಖೆಯಾದರೆ ಶೇ60ರಷ್ಟು ಮುಸ್ಲಿಮರು ಜೈಲು ಸೇರುತ್ತಾರೆ. ರೈತರು ತಮ್ಮ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸಹುದ್ಯೋಗಿಗಳ ತಂಡ ಮೂಡಾ, ವಾಲ್ಮೀಕಿ ನಿಗಮದ ಹಗರಣಗಳಲ್ಲಿ ಭಾಗಿಯಾಗಿದೆ. ಜನರ ಯೋಚನೆ ಬೇರೆಡೆ ಸೆಳೆಯಲು ಇದೊಂದು ಹೊಸ ಹುನ್ನಾರ ಪ್ರಾರಂಭಿಸಿದೆ. ನೂರಾರು ವರ್ಷಗಳ ಹಿಂದಿನ ಸ್ವತ್ತು ತಮ್ಮದೇ ಎನ್ನುತ್ತಿದ್ದಾರೆ. ರಾಜ್ಯದಾದ್ಯಂತ ಸುಮಾರು 16 ಸಾವಿರ ಎಕರೆಗೂ ಅಧಿಕ ರೈತರ, ಮಠಾಧೀಶರ, ಪರಿಶಿಷ್ಟರ ಭೂಮಿ ವಕ್ಫ್ ಬೋರ್ಡ್ ಎಂದು ನಮೂದಾಗಿದೆ. ರೈತರು ಬೀದಿಗೆ ಬೀಳುವ ಆತಂಕ ಎದುರಾಗಿದೆ ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಸದಸ್ಯ ಬಂತಿ ವೆಂಕಟೇಶ್, ನಗರ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *