ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ಕಾನೂನಿನ ಮಹತ್ವವನ್ನು ತಿಳಿದುಕೊಳ್ಳಬೇಕು. ಕಾನೂನಿನ ಅರಿವು ಹೊಂದಿರುವ ವ್ಯಕ್ತಿ ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳುವುದರ ಜತೆಗೆ ಸಮಾಜದಲ್ಲಿ ಇತರರ ಹಕ್ಕುಗಳಿಗೂ ಗೌರವ ನೀಡಲು ಸಾಧ್ಯವಾಗುತ್ತದೆ ಎಂದು ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ ತಿಳಿಸಿದರು.
ತಾಲೂಕಿನ ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ವಕೀಲರ ಸಂಘ, ತಾಲೂಕು ಕಚೇರಿ ಹಾಗೂ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾನೂನು ಎಂಬುದು ಕೇವಲ ನ್ಯಾಯಾಲಯಗಳಲ್ಲಿ ನಡೆಯುವ ವ್ಯಾಜ್ಯಗಳು ಅಥವಾ ಅಪರಾಧಗಳಿಗೆ ಸಂಬಂಧಿಸಿದ ವಿಷಯವಲ್ಲ. ಪ್ರತಿಯೊಬ್ಬ ವ್ಯಕ್ತಿಯ ದೈನಂದಿನ ಬದುಕಿನಲ್ಲಿಯೂ ಕಾನೂನಿನ ಪಾತ್ರ ಮಹತ್ವದ್ದಾಗಿದೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಮಾನತೆಯನ್ನು ಕಾಪಾಡುವಲ್ಲಿ ಕಾನೂನು ಪ್ರಮುಖ ಸಾಧನವಾಗಿದೆ. ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವಷ್ಟೇ ತಮ್ಮ ಕರ್ತವ್ಯಗಳ ಬಗ್ಗೆಯೂ ಅರಿವು ಹೊಂದಿರಬೇಕು. ಹಕ್ಕು ಮತ್ತು ಕರ್ತವ್ಯಗಳ ನಡುವಿನ ಸಮತೋಲನದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ಇಂದಿನ ವಿದ್ಯಾರ್ಥಿಗಳೇ ನಾಳಿನ ಸಮಾಜದ ಜವಾಬ್ದಾರಿಯುತ ನಾಗರಿಕರು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜತೆಗೆ ಸಾಮಾಜಿಕ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಕಾನೂನಿನ ಮೂಲಭೂತ ವಿಚಾರಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಸಮಾಜದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಇರಬೇಕು. ಇಂತಹ ಘಟನೆಗಳು ಕಂಡುಬಂದಾಗ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಅನೇಕ ಸಂದರ್ಭಗಳಲ್ಲಿ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಜನರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಾರೆ. ಕೆಲವರು ಕಾನೂನಿನ ಅರಿವಿನ ಕೊರತೆಯಿಂದ ಅನಗತ್ಯ ಸಮಸ್ಯೆಗಳಿಗೆ ಸಿಲುಕುತ್ತಾರೆ. ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಶಾಲಾ-ಕಾಲೇಜು ಹಂತದಿಂದಲೇ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯವಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಅರ್ಹ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ದೊರೆಯುವ ವ್ಯವಸ್ಥೆಯೂ ಇದೆ. ಆರ್ಥಿಕವಾಗಿ ಹಿಂದುಳಿದವರು ಹಾಗೂ ಕಾನೂನು ನೆರವಿನ ಅಗತ್ಯವಿರುವವರು ಈ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾನೂನಿನ ಅರಿವು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಕಾನೂನನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ನ್ಯಾಯಯುತ, ಸಮಾನತೆಯ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ತಮ್ಮ ಕುಟುಂಬದ ಸದಸ್ಯರು ಹಾಗೂ ಸುತ್ತಮುತ್ತಲಿನ ಜನರಿಗೂ ತಲುಪಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಾಗಡಿ ಅವರು ಉದ್ಘಾಟಿಸಿದರು. ದೊಡ್ಡಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ. ಕ್ರಾಂತಿ ಕಿರಣ್ ಹಾಗೂ ತಹಶೀಲ್ದಾರ್ ಮಲ್ಲಪ್ಪ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಾಲಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲವಂತ್ ಕಲಾಸ್ಟರ್, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…
ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…
ದೊಡ್ಡಬಳ್ಳಾಪುರ: ಬಿಲ್ಡಿಂಗ್‌ಗೆ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಕೇರಳ: ತಿರುರ್‌ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ…