ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿ (ತೆರವಾಗಿರುವ ಸ್ಥಾನ), ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯತಿಗೆ ಉಪ ಚುನಾವಣೆಯನ್ನು ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ 2023ರ ಜುಲೈ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಜುಲೈ 13 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಜುಲೈ 15 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 23 ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ.
ಜುಲೈ 25 ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಜುಲೈ 26 ರ ಬುಧವಾರದಂದು ಅಯಾ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಜುಲೈ 26 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಚುನಾವಣಾ ನೀತಿ ಸಂಹಿತೆಯು ಜುಲೈ 06 ರಿಂದ ಜುಲೈ 26 ರವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.