ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಹೊರತು, ದೊಡ್ಡಬಳ್ಳಾಪುರ ತಾಲೂಕಿನ ಹಿತರಕ್ಷಣೆಗಾಗಿ ಅಲ್ಲ ಎಂದು ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪಿಸಿದ್ದಾರೆ.

2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ ಹಾನಿ ಸಮೀಕ್ಷೆ ನಡೆಸಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಆಗಸ್ಟ್ 27ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಡಾ. ಪರಮೇಶ್ವರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ಶಾಸಕರ ಮನವಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರಂದು ಸರ್ಕಾರ ಪ್ರಕಟಿಸಿದ ಪರಿಷ್ಕೃತ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರ್ಪಡೆಯಾಗಿದೆ. ಹೀಗಿರುವಾಗ ಇದೇ ವಿಚಾರವಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿರುವುದು ಅನಗತ್ಯ ಕ್ರಮವಾಗಿದೆ ಎಂದು ಮನು ಎನ್ ಆರ್ ಟೀಕಿಸಿದ್ದಾರೆ.

ಈಗಾಗಲೇ ಪರಿಹಾರ ಕಂಡಿರುವ ವಿಚಾರವನ್ನು ಪುನಃ ಮನವಿ ಸಲ್ಲಿಸುವ ಮೂಲಕ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಸಮಸ್ಯೆ ಪರಿಹಾರವಾದ ಬಳಿಕವೂ ಪುನರಾವರ್ತಿತ ಮನವಿಗಳ ಮೂಲಕ ಜನರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿಗಳಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದರೆ, ಆ ಮನವಿ ಪತ್ರವನ್ನು ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು. ಒಂದು ದಿನದ ಹಿಂದೆಯೇ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ ಅದರ ಅರಿವಿಲ್ಲದೆ ಮನವಿ ಸಲ್ಲಿಸಿರುವುದು ಮಾಜಿ ಶಾಸಕರ ಕಾರ್ಯವೈಖರಿ ಹೇಗಿದೆ ಎಂಬುದನ್ನು ತಾಲೂಕಿನ ಜನರು ಗಮನಿಸಬೇಕಾಗಿದೆ ಎಂದು ಮನು ಎನ್ ಆರ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!