ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.