ಶಿಕ್ಷಕರ ಕ್ಷೇತ್ರದ ಕರುಡು ಮತದಾರರ ಪಟ್ಟಿ ಪ್ರಕಟ- ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಆಹ್ವಾನ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಚುನಾವಣೆ ಆಯೋಗವು ಕರುಡು ಮತದಾರರ ಪಟ್ಟಿ ಪ್ರಕಟಗೊಳಿಸಿದ್ದು ಹಕ್ಕು ಮತ್ತು ಆಕ್ಷೇಪಣೆ ಅರ್ಜಿ ಸಲ್ಲಿಸಲು ಡಿಸೆಂಬರ್ 10 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್ 30 ರಂದು ಪ್ರಕಟಣೆ ಹೊರಡಿಸಲಾಗಿದೆ. ನಮೂನೆ 19 ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿತ್ತು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರಂದು ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದರು.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1188 ಪುರುಷರು ಮತ್ತು 1184 ಮಹಿಳೆಯರು ಸೇರಿ ಒಟ್ಟು 2372 ಶಿಕ್ಷಕರ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ಹಾಗೂ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗಳ ಅಧಿಕೃತ ಜಾಲತಾಣ ceo.karnataka.gov.in ನಲ್ಲಿ ಅಥವಾ ಸಂಬಂಧಪಟ್ಟ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ವೆಬ್ಸೈಟ್ ನಲ್ಲಿಯೂ ಮಾಹಿತಿ ಲಭ್ಯವಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಅರ್ಹತೆ ಹೊಂದಿರುವ ಶಿಕ್ಷಕರು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 10 ರೊಳಗೆ ಅರ್ಜಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!