
ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ಪ್ರಾಂಶುಪಾಲ ಪಂಚಾಕ್ಷರಯ್ಯ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.
ನಂತರ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶ್ ರೆಡ್ಡಿ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ ಎಂದರು.
ಈ ವೇಳೆ ಕಾನೂನು ಪದವಿ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು..