ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.

ತಾವು ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿರುವುದಾಗಿ ಅವರು ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, “ನಾನು 1973ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಜೀವನ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ನನಗೆ ಟಿಕೆಟ್ ನೀಡಿದ್ದರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಸಂದರ್ಭದಲ್ಲಿ ನಿರ್ದಿಷ್ಟ ಖಾತೆಗಾಗಿ ಲಾಬಿ ನಡೆಸಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿಗಳು ಎರಡು ಬಾರಿ ಕರೆದು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಖಾತೆ ಹಂಚಿಕೆ ವೇಳೆ ಆ ಮಾತು ಉಳಿಸಿಕೊಳ್ಳಲಿಲ್ಲ. ಈ ವಿಚಾರದಿಂದ ಬೇಸರಗೊಂಡು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ” ಎಂದು ಅವರು ತಿಳಿಸಿದರು.

ಇನ್ನೂ, “ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನದ ದಿನವೇ ಅವರನ್ನು ಭೇಟಿ ಮಾಡಿದ್ದೆ. ನಾನು ಸಚಿವ ಸ್ಥಾನಕ್ಕಾಗಿ ಅಥವಾ ಯಾವುದೇ ಖಾತೆಗಾಗಿ ಕೇಳಿರಲಿಲ್ಲ. ಆದರೆ ಅವರೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಹೇಳಿ ಈಗ ಮಾತು ತಪ್ಪಿದ್ದಾರೆ” ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.

ಸಚಿವರ ರಾಜೀನಾಮೆಯಿಂದ ಹೊಸ ಸರ್ಕಾರದ ಒಳಗಿನ ಅಸಮಾಧಾನ ಬಹಿರಂಗವಾಗಿದ್ದು, ಮುಂದಿನ ದಿನಗಳಲ್ಲಿ ಇದರ ರಾಜಕೀಯ ಪರಿಣಾಮಗಳ ಬಗ್ಗೆ ಕುತೂಹಲ ಮೂಡಿದೆ.

Leave a Reply

Your email address will not be published. Required fields are marked *

error: Content is protected !!