ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷರಾದ ಹೆಚ್ ಎ ನಾಗರಾಜು ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಟ್ರ್ಯಾಕ್‌ಸೂಟ್ ಹಾಗೂ ಶೂ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಲ್ಲರಲ್ಲೂ ಸಹಾಯ ಮಾಡುವ ಗುಣ ಇರುವುದಿಲ್ಲ. ಆದರೆ ಸಮಾಜದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ. ದಾನಿಗಳ ರೂಪದಲ್ಲಿ ದೇವರು ಸಹಾಯ ಮಾಡುತ್ತಾನೆ ಎಂಬ ನಂಬಿಕೆಯೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಮಕ್ಕಳಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಡೆಯಬೇಕು ಎಂದರು.

ಸ್ವಾತಂತ್ರ್ಯ ಪೂರ್ವದಿಂದಲೂ ಹಾಡೋನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಹೀಗಾಗಿ ಶಾಲೆಗೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಇಂತಹ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಪೋಷಕರ ಒಲವು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ, ಉತ್ತಮ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಮಕ್ಕಳನ್ನು ಆಕರ್ಷಿಸಬೇಕಿದೆ. ಸರ್ಕಾರದ ಪ್ರಯತ್ನಗಳ ಜೊತೆಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಸಹಕಾರ ನೀಡಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ತಿಳಿಸಿದರು.

ವಕೀಲ ಪ್ರತಾಪ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸುವುದು ಅಗತ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಟ್ರ್ಯಾಕ್‌ಸೂಟ್ ಹಾಗೂ ಶೂಗಳನ್ನು ವಿತರಿಸಲಾಗುತ್ತಿದ್ದು, ಅವುಗಳನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಮಕ್ಕಳಿಗೆ ಅಗತ್ಯವಾದ ಸೌಲಭ್ಯಗಳು ದೊರೆತಾಗ ಅವರಲ್ಲಿ ಶಾಲೆಯ ಬಗ್ಗೆ ಅಭಿಮಾನ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯ ರೂಪಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಚ್.ಕೆ. ಕೆಂಪರಾಜು, ಲಕ್ಷ್ಮೀಕಾಂತ, ನಿವೃತ್ತ ಶಿಕ್ಷಕ ಚಂದ್ರಶೇಖರ್, ಸುಬ್ರಹ್ಮಣಿ, ನಾರಾಯಣಪ್ಪ. ವಿ ಕೃಷ್ಣಯ್ಯ, ಹಾಡೋನಹಳ್ಳಿ ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಎಂ ಮುನೇಗೌಡ, ತೂಬಗೆರೆ ವಿಎಸ್ಎಸ್ಎನ್ ಅಧ್ಯಕ್ಷ ತುರುವನಹಳ್ಳಿ ವಾಸುದೇವ್, ಗ್ರಾಮದ ಮುಖಂಡರಾದ ಕಿಟ್ಟಿ, ತೂಬಗೆರೆ ಗ್ರಾ ಪಂ ಮಾಜಿ ಸದಸ್ಯ ಕೃಷ್ಣ ಮೂರ್ತಿ, ಶೆಟ್ಟಪ್ಪ, ಚೌಡಪ್ಪ, ಎಂ ಮುನಿರಾಜ್, ಕಾಂತರಾಜ್, ಚಂದ್ರಹಾಸ, ವೆಂಕಟೇಶ್ ಪ್ರಸನ್ನ, ಚಂದ್ರಣ್ಣ, ಕೆ.ಪಿ. ಲಕ್ಷ್ಮಿಕಾಂತ್, ಸೇರಿದಂತೆ ಶಾಲಾ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.

ತೂಬಗೆರೆ ಗ್ರಾ ಪಂ ಮಾಜಿ ಸದಸ್ಯ ಕೃಷ್ಣ ಮೂರ್ತಿ,

Leave a Reply

Your email address will not be published. Required fields are marked *

error: Content is protected !!