
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.
“ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಶೀರ್ಷಿಕೆಯೊಂದಿಗೆ ಬರೆದುಕೊಂಡಿರುವ ಅವರು, ತಮ್ಮ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಬೆಂಬಲವಾಗಿ ನಿಂತ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದದ ಫಲವಾಗಿ ಲೋಕಭವನದಲ್ಲಿ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಕೇವಲ ಅಧಿಕಾರದ ಜವಾಬ್ದಾರಿಯಲ್ಲ, ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಅವಕಾಶ ದೊರಕಲು ಕಾರಣರಾದ ಹಿರಿಯರು, ಮಾರ್ಗದರ್ಶಕರು ಹಾಗೂ ತಮ್ಮ ಶಕ್ತಿಯಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇಂದಿನ ತಂತ್ರಜ್ಞಾನ ಯುಗದಲ್ಲಿ ಹೊಸ ಆಲೋಚನೆಗಳೊಂದಿಗೆ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯುವ ಸಂಕಲ್ಪ ವ್ಯಕ್ತಪಡಿಸಿರುವ ಅವರು, ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಸೇರಿದಂತೆ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಎಂದು ಹೇಳಿದ್ದಾರೆ.
“ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ. ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಭವಿಷ್ಯದ ಪೀಳಿಗೆ ಹೆಮ್ಮೆಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ” ಎಂದು ಅವರು ಕರೆ ನೀಡಿದ್ದಾರೆ.
ತಮ್ಮ ಸಂದೇಶದ ಕೊನೆಯಲ್ಲಿ “ಜೈ ಹಿಂದ್, ಜೈ ಕರ್ನಾಟಕ” ಎಂದು ಘೋಷಣೆ ಕೂಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ.