ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ..
ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ ಎಂದರು.
ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ ₹11,000 ಕೋಟಿಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ! ಎಂದು ಹೇಳಿದ್ದಾರೆ.
ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ತಿಳಿಸಿದ್ದಾರೆ.
ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್. ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ! ಈ ಸಾಲ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ ಎಂದಿದ್ದಾರೆ.
ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ಸ್ಟೇಟ್ ಮಿನಿಸ್ಟರ್ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ವೋಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಧಾರುಣ ಬಜೆಟ್ ಇದಾಗಿದೆ ಎಂದರು.
ಮುಂಬರುವ ಸರಕಾರಗಳಿಗೆ ರಾಜ್ಯ ಕಾಂಗ್ರೆಸ್ ಸರಕಾರ ಸೃಷ್ಟಿಸುವ ಸಾಲ ಗುಂಡಿಯನ್ನು ಮುಚ್ಚುವುದೇ ಕೆಲಸ ಆಗಲಿದೆ ಎಂದರು.
ಜೊತೆಗೆ ರಾಜ್ಯದ ಜನತೆಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ… ಧಿಕ್ಕಾರ ! ಎಂದು ಕೂಗುತ್ತಾ ಬಿಜೆಪಿ ಪ್ರತಿಭಟನೆ ನಡೆಸಿದೆ…
ರಾಜ್ಯದ ಜನತೆಯನ್ನು ಸಾಲದ ಸುಳಿಯಲ್ಲಿ ಸಿಲುಕಿಸುವಂತಹ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ವಿಧಾನಸೌಧದ ಮುಂಭಾಗದಲ್ಲಿ ಖಾಲಿ ಚೊಂಬು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ಉಪನಾಯಕರಾದ ಶ್ರೀ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…