ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಸಮಸ್ಯೆ ತಲೆದೋರಬಹುದಾದ ಕೆಲವು ಪ್ರಮುಖ ಸ್ಥಳಗಳು, ಮೆಟ್ರೋ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಉಂಟಾಗಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಚನೆ, ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ನೀರು ಹರಿಯುವ ಕಾಲುವೆಯಲ್ಲಿ ಹೂಳು ತುಂಬಿತ್ತು. ಜಾಸ್ತಿ ಮಳೆ ಸುರಿದಾಗ ಕಾಲುವೆಯಿಂದ ನೀರು ಉಕ್ಕಿ ಮೇಲಕ್ಕೆ ಬರುತ್ತಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿ.ಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿ.ಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದರು.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಚರಂಡಿಗಳು – ಕಾಲುವೆಗಳ ಹೂಳೆತ್ತಬೇಕು, ಒಣಗಿರುವ ಮರದ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದರು.
ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಿದರು.
ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂಬ ಕಾರಣಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದರು.
ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದೇನೆ.
ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಕೆಲವು ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು, ಅದರಂತೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…