ಸುರಕ್ಷತೆ ಮತ್ತು ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮ

ನಗರದ ಹೊರವಲಯದ ಚಿಕ್ಕತುಮಕೂರು ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಮತ್ತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎನ್‌. ಶಿವಶಂಕರ, ‘ತಾಲ್ಲೂಕಿನ ಮೂಲಕ ಹಾದು ಹೋಗಿರುವ ದಾಬಸ್‌ಪೇಟೆ, ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ -648ರಲ್ಲಿ ನಿಗದಿತ ಮಿತಿಗಿಂತ ಹೆಚ್ಚು ವೇಗದಲ್ಲಿ ಚಲಿಸುವ ವಾಹನಗಳ ಮೇಲೆ ನಿಗಾವಹಿಸಲು ವಾಹನ ನೋಂದಣಿ ಗುರುತಿಸುವ ಸ್ವಯಂಚಾಲಿತ ಎಎನ್‌ಪಿಆ‌ರ್ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

ಇತ್ತೀಚೆಗೆ ಹೆದ್ದಾರಿಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಇವುಗಳನ್ನು ನಿಯಂತ್ರಿಸಲು ಹೆದ್ದಾರಿ ಪ್ರಾಧಿಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ, ದೊಡ್ಡಬಳ್ಳಾಪುರ ಉಪವಿಭಾಗ ಇಲಾಖೆ ಸಹಯೋಗ ಅಗತ್ಯವಾಗಿದೆ. ಸುರಕ್ಷತಾ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ಇಲ್ಲಿನ ಹೆದ್ದಾರಿಯಲ್ಲಿ 17 ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಗುರುತಿಸಲಾಗಿದೆ. ಬಹುತೇಕ ಅಪಘಾತಗಳನ್ನು ತಪ್ಪಿಸಲು ಅಗತ್ಯವಿರುವ ಕಡೆಗಳಲ್ಲಿ ಅಂಡರ್ ಪಾಸ್ ನಿರ್ಮಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ಹೆದ್ದಾರಿಗಳಲ್ಲಿ ಏಕಮುಖ ಸಂಚಾರ ಮಾಡುವುದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾ‌ರ್ ವಿಭಾವಿದ್ಯಾ ರಾಠೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ಡಿವೈಎಸ್‌ಪಿ ರವಿ, ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾಧಿಕ್ ಪಾಷಾ ಇದ್ದರು.

Leave a Reply

Your email address will not be published. Required fields are marked *

error: Content is protected !!