ಸೆ.8ಕ್ಕೆ 57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ಸೆಪ್ಟೆಂಬರ್ 8ರಂದು 57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಸಾಕ್ಷರತಾ ದಿನಾಚರಣೆಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

57ನೇ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಕೆ.ಪಿ.ಎಸ್.ಸಿ ವಿಶ್ವನಾಥಪುರ ಶಾಲೆಯಲ್ಲಿ ಆಚರಿಸಲು ಕ್ರಮ ವಹಿಸಿ, ಸಾಕ್ಷರತಾ ಜಾಥಾ ಮತ್ತು ಸಾಕ್ಷರತಾ ಧ್ವಜಾರೋಹಣ ಮತ್ತು ವೇದಿಕೆ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಡಯಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವಜನ ಕ್ರೀಡೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕೃಷಿ ಇಲಾಖೆ, ನಗರಾಭಿವೃದ್ಧಿ ಕೋಶ ಹಾಗೂ ಇತರೆ ಎಲ್ಲಾ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರ ಕಾರ್ಯಕ್ರಮ ಯಶಸ್ವಿಗೆ ಕ್ರಮ ವಹಿಸಿ ಎಂದರು.

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ತಾಲ್ಲೂಕು ಮಟ್ಟದಲ್ಲಿ, ಗ್ರಾಮ ಪಂಚಾಯತಿ ಹಂತದಲ್ಲಿ ಆಚರಿಸಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಮೂಲಕ ನಿರ್ದೇಶಿಸುವಂತೆ ತಿಳಿಸಿದರು.

ಶಾಲಾ ಹಂತದಲ್ಲಿ ಆಚರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲು ಹೇಳಿದರು.

ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಹಂತಗಳಲ್ಲಿ ಸಾಮಾಜಿಕ ಚೇತನ ಕೇಂದ್ರಗಳನ್ನು ಸೆಪ್ಟೆಂಬರ್ 8ರಂದು ಸ್ಥಾಪಿಸಲು ಕ್ರಮವಹಿಸಿ, ಪ್ರತಿ ಶಾಲೆಯಲ್ಲಿಯು ಸಮುದಾಯ ಸಂಚಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಕ್ತ ನಿರ್ದೇಶನ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಶಶಿಕುಮಾರ್ ಎನ್.ಎಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *