ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ಕತ್ತಿಹೊಸಹಳ್ಳಿ ಮೂಲದ ಲಕ್ಷ್ಮಯ್ಯ (55) ಹಾಗೂ ಅವರ ಪತ್ನಿ ಅನಿತಾ (45) ಎಂದು ಗುರುತಿಸಲಾಗಿದೆ.

ಪಿತೃಪಕ್ಷದ ಅಂಗವಾಗಿ ಮನೆಯಲ್ಲಿ ಪೂಜೆ ಹಾಗೂ ಹಬ್ಬದ ಕಾರ್ಯಕ್ರಮ ಮುಗಿಸಿಕೊಂಡಿದ್ದ ದಂಪತಿ, ಬಳಿಕ ಸಂಬಂಧಿಕರ ಮನೆಗೆ ತೆರಳಿ ಹರಿಕಥೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಕೂಗೇನಹಳ್ಳಿ ಗೇಟ್ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!