ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಹಾಗೂ ಸೈಬರ್ ಕ್ರೈಂ ಮಟ್ಟ ಹಾಕುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಡಿಸಿಎಂ ಡಿಕೆಶಿ ಕೆಂಡಾಮಂಡಲ
ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದ ಡಿಸಿಎಂ ಡಿಕೆಶಿ. ನಮ್ಮ ಸರ್ಕಾರದಲ್ಲಿ ಇದಕ್ಕೆಲ್ಲ ಅವಕಾಶ ಕೊಡುವುದಿಲ್ಲ, ಪೊಲೀಸರೇ ಕೇಸರಿ ಶಾಲು ಹಾಕುತ್ತೀರ ಅಂದರೆ ಹೇಗೆ? ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ನಾವು ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಬಿಡೋದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಕೆಶಿ ಗರಂ ಆದರು.