ದೊಡ್ಡಬಳ್ಳಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.
ತಾಲೂಕು ಸಿಡಿಪಿಒ ರವಿಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯೂ ಒಂದಾಗಿದೆ. ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬಂದಿದೆ ಎಂದು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಪ್ಪ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ಅವರಿಗೆ ಸುರಕ್ಷಿತ ಬದುಕಿನ ಭರವಸೆಯನ್ನು ಮೂಡಿಸಬೇಕು. ಈ ಹಂತದಲ್ಲಿ ಸಾಕ್ಷರತೆಯ ಪ್ರಾಮುಖ್ಯತೆ ಹೆಚ್ಚು. ಪ್ರತಿ ವರ್ಷವೂ ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಬಾರಿ ಬಹುಭಾಷಿಕ ಅಧ್ಯಯನ, ಸಾಮರಸ್ಯ ಹಾಗೂ ಶಾಂತಿ ಸ್ಥಾಪನೆಗಾಗಿ ಶಿಕ್ಷಣ ಎಂಬ ಮಹತ್ವದ ಧ್ಯೇಯವನ್ನು ಹೊಂದಲಾಗಿದೆ ಎಂದು ವಿವರಿಸಿದರು.
ಉಪಪ್ರಾಂಶುಪಾಲ ಪ್ರೊ. ದಕ್ಷಿಣಾಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಮಹಿಳಾ ಕೋಶದ ಸಂಚಾಲಕಿ ಉಷಾಶ್ರೀ, ಉದ್ಯೋಗಾಧಿಕಾರಿ ಬಾಬುಸಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿ ಅರುಣ್‌ಕುಮಾರ್, ಲೋಕೇಶ್, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್, ಲಿಯೋ-ಲಯನ್ಸ್ ಕ್ಲಬ್ ಆಫ್ ಆರ್ಯಭಟ, ಅಕ್ಷಯ ಲಿಯೋ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.