ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಭೆ ನಡೆಯಿತು.
ಬೆಂಗಳೂರು ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ 2% ಜನರಿಗೆ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ, CT ವ್ಯಾಲ್ಯೂ 25ಕ್ಕಿಂತ ಕಡಿಮೆ ಇರುವ ಪ್ರಕರಣಗಳ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಿಕೊಡಲಾಗುವುದು.
ರೋಗಲಕ್ಷಣ ಕಂಡುಬರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಬೆಂಗಳೂರಿನ ಬೋರಿಂಗ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ನಿಗದಿತ ಆಸ್ಪತ್ರೆಗಳು ಎಂದು ಗುರುತಿಸಲಾಗಿದೆ.
ಬೂಸ್ಟರ್ ಡೋಸ್ ಲಸಿಕೆಯ ವ್ಯಾಪ್ತಿಯನ್ನು ಆದಷ್ಟು ಶೀಘ್ರದಲ್ಲಿ 50%ಗೆ ಹೆಚ್ಚಿಸಲು ಹಾಗೂ ಸಮರೋಪಾದಿಯಲ್ಲಿ ಪ್ರತಿಯೊಬ್ಬರಿಗೂ ಮೂರನೆ ಡೋಸ್ ತಲುಪಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗಿದೆ.
ರೆಸ್ಟೋರೆಂಟ್, ಬಾರ್ ಹಾಗೂ ಪಬ್ ಗಳನ್ನು ರಾತ್ರಿ 1 ಗಂಟೆಯ ನಂತರ ನಡೆಸದಂತೆ ನಿಷೇಧಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.